ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ಮುಖಂಡ ಬಿಎಸ್ ಯಡಿಯೂರಪ್ಪ ಅವರನ್ನು ಅಪ್ರಾಪ್ತೆ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಪೊಲೀಸರು ಮಂಗಳವಾರ ದಿಢೀರ್ ನೋಟಿಸ್ ನೀಡಿ, ಬುಧವಾರ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಬಿಎಸ್‌ವೈ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಪ್ರಕರಣದ ರದ್ದತಿ ಕೋರಿದ್ದರು. ಇದೇ ವೇಳೆ, ಹೈಕೋರ್ಟ್‌ನಲ್ಲಿ ಈ ಸಂಬಂಧ ರಿಟ್ ಸಲ್ಲಿಕೆಯಾಗಿದೆ. ಯಡಿಯೂರಪ್ಪ ಅವರನ್ನು ಅರೆಸ್ಟ್ ಮಾಡುವಂತೆ ಹೈಕೋರ್ಟ್‌ನಲ್ಲಿ ಸಂತ್ರಸ್ತೆ ಕುಟುಂಬ ಮನವಿ ಮಾಡಿದೆ.
ತುಮಕೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಪರಮೇಶ್ವರ್, ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯಯಿದೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಮಾರ್ಚ್ 14ರಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ತನ್ನ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಫೆಬ್ರವರಿ 2ರಂದು ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಲಾಗಿತ್ತು. ಇದರ ಪ್ರಕಾರ, ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ಮಾಡಲು ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು.
ಮಹಿಳೆ ಇದೇ ರೀತಿ ಸುಮಾರು 53 ಗಣ್ಯರ ವಿರುದ್ಧ ದೂರು ನೀಡಿದ್ದರು. ಹೀಗಾಗಿ, ಇದು ಸುಳ್ಳು ದೂರು ಆಗಿರಬಹುದು ಎಂಬ ವಾದಗಳೂ ಕೇಳಿಬಂದಿದ್ದವು. ಇದೇ ಕಾರಣಕ್ಕೆ ಈ ಪ್ರಕರಣವನ್ನು ಬಿಎಸ್ ಯಡಿಯೂರಪ್ಪ ನಿರ್ಲಕ್ಷಿಸಿದ್ದರು.
ಮಹಿಳೆ ಸಾವು:
81 ವರ್ಷದ ಬಿ.ಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಮಹಿಳೆ ಇತ್ತೀಚೆಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಈ ಮಹಿಳೆ ಬೆಂಗಳೂರಿನ ಹುಳಿಮಾವಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಲ್ಲಿಗೆ ಈ ಪ್ರಕರಣ ಕ್ಲೋಸ್ ಆಯಿತೆಂದೇ ಎಲ್ಲರೂ ಭಾವಿಸಿದ್ದರು.
ಆದರೆ, ಡಿಢೀರ್ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅವರಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಇದೀಗ ಇವರ ಬಂಧನಕ್ಕೆ ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳುತ್ತಿವೆ.
ಫಲಿತಾಂಶದ ನಂತರ ಈ ದಿಢೀರ್ ಬೆಳವಣಿಗೆ ನಡೆದಿದ್ದು, ಇದು ರಾಜಕೀಯ ಪ್ರೇರಿತವಾಗಿರಬಹುದು ಎಂಬ ವಾದವೂ ಕೇಳಿಬರುತ್ತಿದೆ. ದೂರು ನೀಡಿದ ಇಷ್ಟು ಸಮಯದ ಬಳಿಕ ಯಾಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಳೆದ ಮೂರು ತಿಂಗಳು ಪೊಲೀಸರು ಏಕೆ ಸುಮ್ಮನಿದ್ದರು? ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶದ ಹಿನ್ನಡೆಯ ಬಳಿಕ ಈ ರೀತಿ ಯಾಕೆ ಮಾಡಲಾಗುತ್ತಿದೆ? ಎಂದೆಲ್ಲ ವಿಶ್ಲೇಷಿಸಲಾಗುತ್ತಿದೆ. ಸಂತ್ರಸ್ತೆಯ ತಾಯಿಯನ್ನು ಮಾನಸಿಕ ಅಸ್ವಸ್ಥೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ಹೇಳಿಕೆ ಕೊಟ್ಟಿದ್ದರು. ಈ ಪ್ರಕರಣದಲ್ಲಿ ಹುರುಳಿಲ್ಲ ಎಂದು ಯಡಿಯೂರಪ್ಪ ಜಾಮೀನು ಪಡೆಯುವ ಗೋಜಿಗೂ ಹೋಗಿಲ್ಲ. ಆದರೆ ಇದ್ದಕ್ಕಿದ್ದಂತೆ ರಾಜ್ಯ ರಾಜಕೀಯದಲ್ಲಿ ಯಡಿಯೂರಪ್ಪ ಕೇಸ್ ಮತ್ತೆ ಸಂಚಲನ ಉಂಟು ಮಾಡುವ ಸಾಧ್ಯತೆಗಳು ದಟ್ಟವಾಗಿವೆ.