newsics.com
ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.75ರಷ್ಟು ಮೀಸಲಾತಿ ಸೇರಿದಂತೆ ಏಳು ಮಸೂದೆಗಳನ್ನು ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ..
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರಿಗೆ ಶೇ.100 ಮಿಸಲಾತಿ ನೀಡಲಾಗಿದೆ ಎಂದು ಅಧಿಕೃತವಾಗಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಡಿಲೀಟ್ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಆದರೆ, ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೆಲ ಕೈಗಾರಿಕೋದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಗಂಭೀರವಾದ ತಕ್ಷಣ ಸಿದ್ದರಾಮಯ್ಯ ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದರು.
ಅಲ್ಲದೆ, ಕನ್ನಡಿಗರಿಗೆ 75% ಮಾತ್ರ ಆದ್ಯತೆ ನೀಡಿರುವ ಸರ್ಕಾರದ ನಿರ್ಧಾರ ಕೂಡ ಚರ್ಚೆಗೆ ಗ್ರಾಸವಾಗಿದೆ.
ಸೋಮವಾರ ನಡೆದ ಸಂಪುಟ ಸಭೆಯು ಖಾಸಗಿ ಕೈಗಾರಿಕೆಗಳು ಮತ್ತು ಇತರ ರಾಜ್ಯ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ 50% ಮತ್ತು ಆಡಳಿತೇತರ ಹುದ್ದೆಗಳಿಗೆ 75% ಮೀಸಲಾತಿಯನ್ನು ಸ್ಥಾಪಿಸುವ ಮಸೂದೆಗೆ ಅನುಮೋದನೆ ನೀಡಿದೆ ಎಂದು ಸಿದ್ದರಾಮಯ್ಯ ಕನ್ನಡದಲ್ಲಿ ಹೊಸ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಕನ್ನಡಿಗರ ಹಿತ ಕಾಪಾಡುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ. ರಾಜ್ಯದ ಎಲ್ಲಾ ಖಾಸಗಿ ಉದ್ಯಮಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ಶೇಕಡಾ 100 ರಷ್ಟು, ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಕನ್ನಡಿಗರ ನೇಮಕ ಕಡ್ಡಾಯಗೊಳಿಸುವ ಮಸೂದೆಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕನ್ನಡಿಗರು ಉದ್ಯೋಗದಿಂದ ವಂಚಿತರಾಗುವುದನ್ನು ತಪ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ. ಕನ್ನಡ ನಾಡು, ಮಾತೃಭೂಮಿಯಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು, ಕನ್ನಡಿಗರ ಹಿತ ಕಾಪಾಡುವುದೇ ನಮ್ಮ ಆದ್ಯತೆ’ ಎಂದು ಬರೆದುಕೊಂಡಿದ್ದಾರೆ.
ರಾಜ್ಯದಿಂದ ನೆಲ, ಜಲ ಸೇರಿದಂತೆ ಮೂಲಸೌಕರ್ಯ ಪಡೆಯುವ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಮಸೂದೆಯಲ್ಲಿ ಹೇಳಲಾಗಿದ್ದು, ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದ್ದರು.