newsics.com
ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದೆ.
2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್ ಎಂವೈ, ಎಂ.ರುದ್ರೇಶ್, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿತ್ತು.
ಪೋಕ್ಸೊ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.