newsics.com
ಇಂದು ಮಧ್ಯಾಹ್ನ 3:30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಈ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ.
ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರುಗಳ ರಾಜೀನಾಮೆಯಿಂದ ಮೂರು ವಿಧಾನಸಭಾ ಕ್ಷೇತ್ರಗಳ ಸ್ಥಾನ ತೆರವಾಗಿದೆ.
ಮೂವರು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದಾರೆ. ಶಾಸಕರ ರಾಜೀನಾಮೆಯಿಂದ ಯಾವುದೇ ಕ್ಷೇತ್ರ ತೆರವಾದ್ರೆ ಮುಂದಿನ 6 ತಿಂಗಳೊಳಗೆ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬೇಕು. ಇಂದಿನ ಸುದ್ದಿಗೋಷ್ಟಿಯಲ್ಲಿ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಿದೆ. 288 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆ ಕ್ಷೇತ್ರದ ಅಧಿಕಾರದ ಅವಧಿಯು ನವೆಂಬರ್ 26 ರಂದು ಅಂತ್ಯಗೊಳ್ಳಲಿದೆ. ಜಾರ್ಖಂಡ್ 81 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.