newsics.com
ಬೆಂಗಳೂರು: ವಾಟ್ಸ್ಯಾಪ್ ವಿಡಿಯೋ ಕರೆ ಮೂಲಕ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅದೇ ಪಕ್ಷದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ ಬಂಧಿತರು. ಆರೋಪಿಗಳು ಕಲಬುರಗಿಯ ಆಳಂದ ರಸ್ತೆಯ ವಿಜಯನಗರ ಕಾಲೊನಿ ನಿವಾಸಿಗಳು.
ಮಂಜುಳಾ ಪಾಟೀಲ್ ಖೆಡ್ಡಾಗೆ ಮಾಜಿ ಸಚಿವರು ಮಾತ್ರ ಅಲ್ಲ, ಇನ್ನೂ ಹಲವರನ್ನು ಖೆಡ್ಡಾಗೆ ಕೇಡುವಿದ ಮಾಹಿತಿ ಆಕೆಯ ಮೊಬೈಲ್ನಲ್ಲಿ ಪತ್ತೆಯಾಗಿದೆ.
ಬಂಧಿತ ಮಂಜುಳಾ ಪಾಟೀಲ್ ವಾಟ್ಸ್ಯಾಪ್ ಮೂಲಕ ವಿಡಿಯೊ ಕರೆ ಮಾಡಿ ಅವುಗಳನ್ನು ರೆಕಾರ್ಡ್ ಮಾಡಿಕೊಂಡು ಬಳಿಕ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.
ಆಡಿಯೋ-ವಿಡಿಯೋ ಬಿಡುಗಡೆ ಮಾಡದಿರಲು ಮಾಲೀಕಯ್ಯ ಗುತ್ತೇದಾರ್ ಅವರಿಂದ 20 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದ ಮಂಜುಳಾ, ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ನಿತ್ಯ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಆಕೆ, ಬಳಿಕ ಇವುಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡಲಾರಂಭಿಸಿದ್ದಳು.
ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ನೆಲೆಸಿರುವ ಮಾಲೀಕಯ್ಯ ಪುತ್ರ ರಿತೀಶ್ ಭೇಟಿಯಾಗಿ ಡೀಲ್ ನಡೆಸಲು ಮಂಜುಳಾ ದಂಪತಿ ಮುಂದಾಗಿದ್ದರು. ಬಳಿಕ ಈ ಬಗ್ಗೆ ರಿತೇಶ್ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ
.
ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಶನಿವಾರವೇ ಬೆಂಗಳೂರಿನ ಗರುಡಾ ಮಾಲ್ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು ಎಂಟು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ರಿತೇಶ್ ಅವರಿಗೆ ಅಕ್ಟೋಬರ್ 21ರಂದು ಕರೆ ಮಾಡಿದ್ದ ಆರೋಪಿ ಮಂಜುಳಾ, ತಾನು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಎಂದು ಪರಿಚಯಿಸಿಕೊಂಡಿದ್ದರು. ಮಾಲೀಕಯ್ಯ ಗುತ್ತೇದಾರ್ ಅವರು ತನಗೆ ನಿಂದನೆಯ ಸಂದೇಶ ಕಳುಹಿಸುತ್ತಿದ್ದಾರೆ. ಈ ಸಂಬಂಧ ತಮ್ಮೊಂದಿಗೆ ಚರ್ಚಿಸಬೇಕೆಂದು ಕೇಳಿಕೊಂಡಿದ್ದರು. ನಂತರ, ಕೊಡಿಗೇಹಳ್ಳಿಯ ಸ್ವಾತಿ ಗಾರ್ಡೆನಿಯಾ ಹೋಟೆಲ್‌ನಲ್ಲಿ ರಿತೇಶ್ ಅವರನ್ನು ಆರೋಪಿಗಳು ಭೇಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಲೀಕಯ್ಯ ಅವರ ವಿರುದ್ಧ ಪೊಲೀಸರಿಗೆ ಯಾವುದೇ ದೂರು ನೀಡದಿರಲು ಹಾಗೂ ಮಾಧ್ಯಮಗಳಿಗೆ ಮಾಹಿತಿ ನೀಡದಿರಲು 20 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅಕ್ಟೋಬರ್ 23 ಹಾಗೂ 24ರಂದು ಪದೇ ಪದೇ ವಾಟ್ಸ್ಯಾಪ್ ಕರೆ ಮಾಡಿ ಹಣ ನೀಡಿದರೆ ನಿಂದನೆ ಸಂದೇಶಗಳನ್ನು ಡಿಲಿಟ್ ಮಾಡುತ್ತೇವೆ. ಇಲ್ಲದಿದ್ದರೆ ಬಹಿರಂಗ ಪಡಿಸುವುದಾಗಿ ಆರೋಪಿಗಳು ಬೇಡಿಕೆ ಇಟ್ಟಿದ್ದರು.
ಹನಿಟ್ರ್ಯಾಪ್ ಮಾಡಲು ಹೋಗಿ ಸಿಸಿಬಿ ಬಲೆಗೆ ಬಿದ್ದಿರುವ ಮಂಜುಳಾ ಪಾಟೀಲ್ ಬ್ಯಾಗ್‌ನಲ್ಲಿ 6 ಸ್ಮಾರ್ಟ್ ಪೋನ್‌ಗಳು ಪತ್ತೆಯಾಗಿವೆ. ಈ ಆರು ಫೋನ್‌ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ, ಪೊಲೀಸ್ ಅಧಿಕಾರಿ, ಪಿಡಬ್ಲೂಡಿ ಅಧಿಕಾರಿ ಸೇರಿ ಎಂಟು ಜನರ ವಿಡಿಯೋಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 9 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ