newsics.com
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡರ ದೌರ್ಜನ್ಯ, ಕನ್ನಡ ಭಾಷಿಕರ ಮೇಲೆ ಮರಾಠಿಗರ ದೌರ್ಜನ್ಯ ಖಂಡಿಸಿ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದರು. ರಾಜ್ಯಾದ್ಯಂತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇದೀಗ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ ಗೋವಿಂದು ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.
ಬಳಿಕ ಫ್ರೀಡಂ ಪಾರ್ಕ್ ನಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು. ಬಸ್ ನಿಂದ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದ ವಾಟಾಳ್ ನಾಗರಾಜ್, ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಆದರೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಬಂದ್ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಪೊಲೀಸ್ ರಾಜ್ಯ, ಪೊಲೀಸ್ ಗೂಂಡಾಗಿರಿ ಎಂದು ಆಕ್ರೋಶ ವ್ಯಕ್ತಪಡಿದರು.