newsics.com
ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆ ಮುಂದುವರೆದಿದ್ದು, ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಗ್ರಾಮಾಂತರ ಭಾಗ, ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಹೀಗಾಗಿ ಸಕಲೇಶಪುರ ತಾಲೂಕಿನ ಶಾಲೆಗಳು, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ನಿರಂತರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಖಾನಾಪುರ, ಕಿತ್ತೂರು ತಾಲೂಕು ಶಾಲೆ, ಅಂಗನವಾಡಿ ಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ದಾಂಡೇಲಿ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಮಡಿಕೇರಿ, ಸೋಮವಾರಪೇಟೆ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎರಡು ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ನೀಡಲಾಗಿದೆ.