newsics.com
ಬೆಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ರಾಜ್ಯಾದ್ಯಂತ ಗಾಳಿಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯವ ಸಾಧ್ಯತೆಯಿದ್ದು, ಎಚ್ಚರ ವಹಿಸುವಂತೆ ಸೂಚಿಸಿದೆ.
ಮಧ್ಯ ಮತ್ತು ಪೂರ್ವ ಭಾರತದ ಮೂಲಕ ಹಾದುಹೋಗುವ ಮಾನ್ಸೂನ್ ವಾಯುಭಾರ ಕುಸಿತ ಹಾಗೂ ಮಹಾರಾಷ್ಟ್ರ-ಕರ್ನಾಟಕ ಕರಾವಳಿಯುದ್ದಕ್ಕೂ ವಿಸ್ತರಿಸಿರುವ ಕಡಲಾಚೆಯ ವಾಯುಭಾರ ಕುಸಿತದಿಂದಾಗಿ ಹವಾಮಾನದ ಸ್ವರೂಪ ಬದಲಾಗುತ್ತಿದೆ ಎಂದು ಐಎಂಡಿ ತಿಳಿಸಿದೆ.
ದೈನಂದಿನ ಹವಾಮಾನ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಮುಂದಿನ ಎರಡು ದಿನ ಕರಾವಳಿಯಲ್ಲಿ ಇದೇ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ. ಬಳಿಕ ಹಗುರದಿಂದ ಮಧ್ಯಮ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.
ಕರ್ನಾಟಕದ ಉತ್ತರ ಒಳನಾಡು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಜುಲೈ 4ರಂದು ಗಂಟೆಗೆ 40-50 ಕಿ.ಮೀ. ಗಾಳಿ ಬೀಸಲಿದೆ.
ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಗಳಲ್ಲಿ ಭಾರೀ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 4 ರಂದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಮತ್ತಿತರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ.
ಮೋಡ ಕವಿದ ವಾತಾವರಣ:
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
School Holiday ಭಾರೀ ಮಳೆ ಹಿನ್ನೆಲೆ: ಶುಕ್ರವಾರ ಈ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ
ಅಕ್ರಮ ಆಸ್ತಿ ಗಳಿಕೆ ಆರೋಪ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ FIR ದಾಖಲು