newsics.com
ಕಳೆದ ಕೆಲವು ದಿನಗಳಿಂದ ಯುಪಿಐ ಮೂಲಕ ಹಣ ಸ್ವೀಕರಿಸುತ್ತಿರುವ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ ಜಾರಿ ಮಾಡಲಾಗುತ್ತಿದೆ. ತಮಗೆ ಬಂದ ಲಕ್ಷ ಲಕ್ಷ ತೆರಿಗೆ ನೋಟಿಸ್ ನೋಡಿ ವ್ಯಾಪಾರಿಗಳು ಶಾಕ್ ಆಗಿದ್ದಾರೆ. ಸಣ್ಣ ವರ್ತಕರು, ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ವಾಣಿಕ್ಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ವರ್ತಕರ ಸಭೆ ಮಾಡಿ ಚರ್ಚಿಸಿದರು. ಸಭೆಯಲ್ಲಿ ಸಣ್ಣ ವ್ಯಾಪಾರಿಗಳಿಗೆ ಸಿಎಂ ಬಿಗ್ ರಿಲೀಫ್ ನೀಡಿದ್ದಾರೆ.
ಜಿಎಸ್‌ಟಿ ನೋಟಿಸ್ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು.
ಜುಲೈ 25 ರಂದು ಕರೆ ನೀಡಿದ್ದ ವರ್ತಕರ ಬಂದ್ ವಾಪಸ್ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.