Subscribe NewsicsKannada/YouTube
newsics.com
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್‌ನ 14ನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದ ಭಾರತ ತಂಡ ಭಾರೀ ಜಯ ಸಾಧಿಸಿದೆ.
ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ಪರ ಆರಂಭಿಕ ದಾಂಡಿಗ ಸಾಹಿಬ್ಝಾದ ಫರ್ಹಾನ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. 45 ಎಸೆತಗಳನ್ನು ಎದುರಿಸಿದ ಫರ್ಹಾನ್ 3 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 58 ರನ್ ಬಾರಿಸಿ ಔಟಾದರು.
ಸೈಮ್ ಅಯ್ಯೂಬ್ 21 ರನ್ಗಳ ಕೊಡುಗೆ ನೀಡಿದರೆ, ಕೊನೆಯ ಹಂತದಲ್ಲಿ ಫಹೀಮ್ ಅಶ್ರಫ್ 20 ರನ್ ಬಾರಿಸಿದರು. ಈ ಮೂಲಕ ಪಾಕಿಸ್ತಾನ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.
172 ರನ್ಗಳ ಗುರಿ ಪಡೆದ ಟೀಮ್ ಇಂಡಿಯಾಗೆ ಶುಭ್ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ಸ್ಫೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್ನ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿ ಶುಭಾರಂಭ ಮಾಡಿದ ಅಭಿಷೇಕ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಶುಭ್ಮನ್ ಗಿಲ್ ಕೂಡ ಬಿರುಸಿನ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು. ಈ ಮೂಲಕ ಗಿಲ್ ಕೂಡ 28 ಎಸೆತಗಳಲ್ಲಿ 47 ರನ್ ಬಾರಿಸಿದರು. ಆರಂಭಿಕರಿಬ್ಬರ ತೂಫಾನ್ ಬ್ಯಾಟಿಂಗ್ನೊಂದಿಗೆ ಟೀಮ್ ಇಂಡಿಯಾ ಕೇವಲ 10 ಓವರ್ಗಳಲ್ಲಿ 109 ರನ್ ಕಲೆಹಾಕಿತು.
ಶುಭ್ಮನ್ ಗಿಲ್ (47) ಔಟಾದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ (0) ಕೂಡ ವಿಕೆಟ್ ಒಪ್ಪಿಸಿದರು.
ಮತ್ತೊಂದೆಡೆ ಆರ್ಭಟ ಮುಂದುವರಿಸಿದ ಅಭಿಷೇಕ್ ಶರ್ಮಾ 39 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 74 ರನ್ ಚಚ್ಚಿದರು. ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು.
ಬಳಿಕ ಬಂದ ಸಂಜು ಸ್ಯಾಮ್ಸನ್ 13 ರನ್ಗಳಿಸಿ ಔಟಾದರು. ಈ ಹಂತದಲ್ಲಿ ಜೊತೆಗೂಡಿದ ತಿಲಕ್ ವರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಉತ್ತಮ ಜೊತೆಯಾಟದೊಂದಿಗೆ ಭಾರತ ತಂಡವನ್ನು 18.5 ಓವರ್ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 21 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ.
ಈ ವೇಳೆ ಭಾರತ ತಂಡ 12 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ 6 ಪಂದ್ಯಗಳಲ್ಲಿ ಮಾತ್ರ. ಇನ್ನು ಮೂರು ಮ್ಯಾಚ್ಗಳು ಕಾರಣಾಂತರಗಳಿಂದ ರದ್ದಾಗಿದ್ದವು.