newsics.com
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಮೈದಾನಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆದರಿಕೆ ಕರೆ ಮಾಡಿದ ಆರೋಪಿಯನ್ನು ದಾನಪ್ಪ ನರೋನೆ ಎಂದು ಗುರುತಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ ನನ್ನು ಲಾತೂರ್ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ ವೇಳೆಗೆ ಬೆಂಗಳೂರಿಗೆ ಕರೆತರಲಿದ್ದಾರೆ.
ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು, ‘ಆರ್ಎಸ್ಎಸ್ ಚಟುವಟಿಕೆಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ’ ಎಂದು ಆರೋಪಿಸಿ, ಸರ್ಕಾರಿ ಆವರಣಗಳಲ್ಲಿ ಅವುಗಳ ನಿಷೇಧಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಈ ರಾಜಕೀಯ ನಿರ್ಧಾರದ ಬೆನ್ನಲ್ಲೇ ಖರ್ಗೆ ಅವರಿಗೆ ದಾನಪ್ಪ ನರೋನೆ ಎಂಬ ವ್ಯಕ್ತಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಬೆದರಿಕೆಯನ್ನು ಹಾಕಿದ್ದ.
ಘಟನೆಯ ನಂತರ, ಸಚಿವ ಪ್ರಿಯಾಂಕ್ ಖರ್ಗೆ ಅವರ ದೂರನ್ನು ಆಧರಿಸಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಆರೋಪಿಯು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಪೊಲೀಸ್ ತಂಡವು ಮಹಾರಾಷ್ಟ್ರಕ್ಕೆ ತೆರಳಿತು.
ಬೆಂಗಳೂರು ಪೊಲೀಸರು ಸ್ಥಳೀಯ ಪೊಲೀಸರ ಸಹಾಯದೊಂದಿಗೆ, ಬೆಂಗಳೂರು ಹಾಗೂ ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ದಾನಪ್ಪ ನರೋನೆಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಿದ್ದಾರೆ.
ಖರ್ಗೆ ಅವರು ತಮ್ಮ ನಿಲುವು ಕುರಿತು ಸಾರ್ವಜನಿಕವಾಗಿ ವಿಡಿಯೋ ಸಂದೇಶವೊಂದನ್ನು ನೀಡುತ್ತಿದ್ದ ಸಂದರ್ಭದಲ್ಲಿಯೇ ಈ ಆರೋಪಿಯು ಕರೆ ಮಾಡಿ ಬೆದರಿಕೆ ಮತ್ತು ನಿಂದನೆ ಮಾಡಿದ್ದ ಎಂದು ತಿಳಿದುಬಂದಿದೆ.
ಸಚಿವರಿಗೆ ಬೆದರಿಕೆ ಕರೆ ಮಾಡಿರುವ ದಾನಪ್ಪ ನರೋನೆ ಅವರ ಹಿನ್ನೆಲೆ, ಈ ಕರೆಯ ಹಿಂದಿನ ಉದ್ದೇಶ ಮತ್ತು ಯಾರಾದರೂ ಈ ಕೃತ್ಯಕ್ಕೆ ಪ್ರಚೋದನೆ ನೀಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಅನುಮತಿ ಪಡೆದು ಬೆಂಗಳೂರಿಗೆ ಕರೆತರಲಾಗುತ್ತದೆ.
https://twitter.com/i/status/1978311483776713110
Home Loan EMI: ಗೃಹಸಾಲದ ಇಎಂಐ ಕಟ್ಲಿಲ್ಲ ಅಂದ್ರೆ ಬ್ಯಾಂಕ್ನವರು ಮನೆಗೆ ಬೀಗ ಹಾಕಿಬಿಡುತ್ತಾರಾ?