newsics.com/ನ್ಯೂಸಿಕ್ಸ್
ಬೆಂಗಳೂರು: ಕರ್ನಾಟಕದ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2026ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಹೆಚ್ಚಳ ಮಾಡಿ ಆದೇಶ ಮಾಡಿದೆ. ಪ್ರಸ್ತುತ ಮೂಲ ವೇತನದ ಶೇ.14.25 ರಿಂದ ಶೇ.15.75 ಗೆ ಪರಿಷ್ಕರಿಸಿ ಡಿಎ ಏರಿಕೆ ಮಂಜೂರು ಮಾಡಿದೆ. ಏಪ್ರಿಲ್ ನಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ.2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ. 1.50 ರಷ್ಟು ಡಿಎ ಹೆಚ್ಚಳ ಮಾಡಿ ಆದೇಶಿಸಿದ್ದು ಗುಡ್ ನ್ಯೂಸ್ ಇದಾಗಿದೆ.
ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರ ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ನೌಕರನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿಯನ್ನು ಸಹ ಇದರಲ್ಲೇ ಸೇರಿಸಲಾಗುವುದು.
ಅದೇ ರೀತಿ 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮದಡಿ ನೌಕರನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ ಹಾಗೂ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಸಿಬ್ಬಂದಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳನ್ನು ಸೇರಿಸಿ ಅದರ ಮೇಲೆ ತುಟ್ಟಿಭತ್ಯೆ ನೀಡುವ ಬಗ್ಗೆ ಸರ್ಕಾರ ಆದೇಶ ನೀಡಿದೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ 1ನೇ ಜನವರಿ 2026 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿ ಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 14.25 ರಿಂದ ಶೇಕಡ 15.75 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ ಎಂದು ಹೇಳಿದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುತ್ತದೆ. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು, ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು. ಮತ್ತು 50 ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.