ರಾಜ್ಯದ ಹಲವೆಡೆ ಮಳೆ ಆರ್ಭಟಿಸುತ್ತಿದೆ. ಮಳೆ ಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಎಂಬುವವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದಾಗ ಸಿಡಿಲು ಬಡಿದಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ.
ಧಾರವಾಡದ ಕವಲಗೇರಿಯಲ್ಲಿ 36 ವರ್ಷದ ಜಯಶ್ರಿ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಕೋಮಲಾಪುರ ಗ್ರಾಮದ ಕರಿಯಪ್ಪ ಗೆನ್ನಾಕಿಹಾಳ್ (45) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಬಸವರಾಜ್ ಎಂದು ತಿಳಿದುಬಂದಿದೆ.
ಗ್ರಾಮದಲ್ಲಿ ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಕರಿಯಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜೊತೆಗಿದ್ದ ಬಸವರಾಜ್‌ಗೂ ಸಿಡಿಲು ಬಡಿದು ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇನ್ನು ಧಾರವಾಡ ಜಿಲ್ಲೆಯಲ್ಲಿ ಸುರಿದ ಭಾರೀ ಸಿಡಿಲು ಸಹಿತ ಮಳೆಗೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತ ಮಹಿಳೆಯನ್ನು ಕವಲಗೇರಿಯ ಜಯಶ್ರೀ ಶಿರಸಂಗಿ (36) ಎಂದು ಗುರುತಿಸಲಾಗಿದೆ. ಪತಿ ಹನುಮಂತಪ್ಪ ಶಿರಸಂಗಿ ಜೊತೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಜಯಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಹನುಮಂತಪ್ಪ ಅವರಿಗೂ ಗಾಯಗಳಾಗಿದ್ದು, ಅವರನ್ನು ಕೂಡಲೇ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಸಿಡಿಲು ಬಡಿದು ಮೂರು ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ. ಜೊತೆಗೆ ಮಂಗಳವಾಡದ ಸರ್ಕಾರಿ ಪ್ರೌಢಶಾಲೆ ಕಟ್ಟಡಕ್ಕೂ ಹಾನಿಯಾಗಿದೆ. ಮೃತಪಟ್ಟ ಹಸುಗಳು ಗ್ರಾಮದ ರೋಮನ್ ಬಾವಟಿಸ್ ದಾಲ್ಮತ್ ಎಂಬುವವರಿಗೆ ಸೇರಿದ್ದಾಗಿವೆ. ಸಿಡಿಲಿನ ತೀವ್ರತೆಗೆ ಸರ್ಕಾರಿ ಪ್ರೌಢಶಾಲೆ ಕಟ್ಟಡದ ಮೇಲ್ಛಾವಣಿಗೂ ಹಾನಿಯಾಗಿದೆ.
15 ಪದಾಧಿಕಾರಿಗಳ ವಜಾ ಮಾಡಿದ ಹೈಕಮಾಂಡ್; ಕರ್ನಾಟಕ ಕಾಂಗ್ರೆಸ್ನಲ್ಲಿ ಸಂಚಲನ