newsics.com/ನ್ಯೂಸಿಕ್ಸ್
ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದಾರೆ. ನಾಳೆ ಗುರುವಾರ ಬೆಳಿಗ್ಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಹೈಕಮಾಂಡ್ ನಾಯಕರು ನಡೆಸಿದ ಮ್ಯಾರಥಾನ್ ಸಭೆ ಬಳಿಕ ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ್ದ ಹಿನ್ನೆಲೆಯಲ್ಲಿ ಕೊಟ್ಟ ಮಾತಿನಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ರಾಹುಲ್ ಗಾಂಧಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ.
ಅದರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ನಲ್ಲಿ ಚಟುವಟಿಕೆ ಗರಿಗೆದರಿದೆ.
ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಬೆನ್ನಲ್ಲೇ ಸಚಿವರು, ಶಾಸಕರು ಸಿಎಂ ಕಾವೇರಿ ನಿವಾಸಕ್ಕೆ ದೌಡಾಯಿಸಿದ್ದಾರೆ. ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್, ಬೈರತಿ ಸುರೇಶ್, ಸುಧಾಕರ್, ಸಂತೋಷ್ ಲಾಡ್, ಶಾಸಕರಾದ ನಾಗೇಂದ್ರ, ಆರ್.ವಿ.ದೇಶಪಾಂಡೆ, ಕೆ.ವೈ.ನಂಜೇಗೌಡ, ಎಂಎಲ್ ಸಿ ರಾಜೇಂದ್ರ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ಸಚಿವರು, ಶಾಸಕರು, ಎಂಎಲ್ ಸಿಗಳು ಸಿಎಂ ಭೇಟಿಯಾಗಿ ಚರ್ಚಿಸಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿರುವ ಹಿನ್ನೆಲೆ ಕೆಲವು ಆಪ್ತ ಸಚಿವರು ಮತ್ತು ಶಾಸಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಲಾಖೆಗಳಲ್ಲಿ ಬಾಕಿ ಉಳಿದಿರುವ ಹಲವಾರು ಅನುದಾನದ ಆದೇಶಗಳು ಮತ್ತು ಯೋಜನೆಗಳಿಗೆ ಸಿಎಂ ಸಮ್ಮತಿ ಅಗತ್ಯವಿದೆ. ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಿದರೆ ಈ ಕೆಲಸಗಳು ನಿಂತುಹೋಗುವ ಭೀತಿ ಸಚಿವರನ್ನು ಕಾಡುತ್ತಿದೆ. ಆದ್ದರಿಂದ, ಸಚಿವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕನಿಷ್ಠ ರಾಜ್ಯಸಭೆ ಚುನಾವಣೆ ಮುಗಿಯುವ ಜೂನ್ 18ರವರೆಗೆ ರಾಜೀನಾಮೆಯನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ. ಆದರೆ, ಹೈಕಮಾಂಡ್ ನಾಯಕರ ಸೂಚನೆಯನ್ನು ಒಪ್ಪಿಕೊಂಡಿರುವ ಸಿದ್ದರಾಮಯ್ಯ, ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಯಾವುದೇ ಒತ್ತಡಕ್ಕೂ ಮಣಿಯದೆ ನಾಳೆಯೇ ರಾಜೀನಾಮೆ ನೀಡುವ ತಮ್ಮ ದೃಢ ನಿಲುವನ್ನು ಅವರು ಸಚಿವರುಗಳಿಗೆ ಸ್ಪಷ್ಟಪಡಿಸಿದ್ದಾರೆ. ಹೊಸ ಫೈಲ್‌ಗಳನ್ನು ಚಲಿಸದಂತೆ ಸೂಚಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಕುರಿತು ಮತ್ತಷ್ಟು ಚರ್ಚೆ ನಡೆಯುವ ನಿರೀಕ್ಷೆ ಇದೆ.
ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ