newsics.com/ನ್ಯೂಸಿಕ್ಸ್
ಬೆಂಗಳೂರು : ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯನವರು ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುಟುಕಾಗಿ ತಮ್ಮ ರಾಜಕೀಯ ಹಾದಿ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮೆಲುಕು ಹಾಕಿದರು. ಇನ್ನು ಇದೇ ವೇಳೆ ಸಿದ್ದರಾಮಯ್ಯನವರು ನಟ ರಾಜಕುಮಾರ್ ಅವರನ್ನು ನೆನಪಿಸಿಕೊಂಡಿದ್ದು ವಿಶೇಷ.
ನಟ ರಾಜಕುಮಾರ್ ಅಭಿಮಾನಿ ದೇವರು ಅಂತಾ ಕರೀತಿದ್ರು, ನಾನು ರಾಜಕಾರಣಿ, ಸಂವಿಧಾನವನ್ನೇ ನಮ್ಮ ಧರ್ಮ ಎಂದು ತಿಳಿದಿದ್ದೇನೆ. ಮತದಾರರೇ ನಮ್ಮ ಅಭಿಮಾನಿ ದೇವರು. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಕೋಟಿ ಜನಸಂಖ್ಯೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು, ಎರಡು ಬಾರಿ ವಿಪಕ್ಷ ನಾಯಕನಾಗುವ ಅವಕಾಶ ಸಿಕ್ಕಿತ್ತು ಎಂದರು.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ. ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ ಎಂದರು.