newsics.com| ನ್ಯೂಸಿಕ್ಸ್
ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಬಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ. ಓರ್ವ ಬಾಲಕ ಇನ್ನೂ ಬಸ್ನಲ್ಲೇ ಸಿಲುಕಿದ್ದಾನೆ. ಆತನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಈ ಹಿಂದೆ ಸಹ ಈ ಪ್ರದೇಶದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ.
ಮರಗಳನ್ನು ತೆರವುಗೊಳಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಗೆ ಪತ್ರ ಬರೆಯಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.