newsics.com| ನ್ಯೂಸಿಕ್ಸ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಜುಲೈ ತಿಂಗಳ ಆರಂಭದಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.ಕಳೆದೆರಡು ದಿನಗಳಿಂದ ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನು ಕೆಲ ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದ್ದು, ಇನ್ನೆರಡು ದಿನ ರಾಜ್ಯದಲ್ಲಿ ಬಿಡುವಿಲ್ಲದ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 1, 2 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅತಿ ಹೆಚ್ಚು ಅಂದರೆ 204.5 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.
ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಮಲೆನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ 1 ರಿಂದ 5 ವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಜುಲೈ 5 ರಂದು ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಮುಂದುವರೆಯಲಿದೆ.
ಬೆಂಗಳೂರು ಸೇರಿ ರಾಜ್ಯದ ಉಳಿದ ಭಾಗಗಳಲ್ಲಿ ಮಳೆಯಿಂದ ಯಾವುದೇ ಅಪಾಯದ ಮುನ್ಸೂಚನೆ ಇಲ್ಲ. ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.