newsics.com | ನ್ಯೂಸಿಕ್ಸ್
ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಕರಾವಳಿಗೆ ಆರೆಂಜ್ ಅಲರ್ಟ್: ಮೀನುಗಾರರಿಗೆ ಕಡ್ಡಾಯ ಎಚ್ಚರಿಕೆ
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಳೆಯ ಜೊತೆಗೆ ಗಂಟೆಗೆ ೩೦ ರಿಂದ ೪೦ ಕಿಲೋಮೀಟರ್ ವೇಗದಲ್ಲಿ ತೇವಾಂಶಭರಿತ ಬಿರುಗಾಳಿ ಬೀಸಲಿದ್ದು, ಈ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಕಡಲತೀರದ ನಿವಾಸಿಗಳು ಹಾಗೂ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಮತ್ತು ಜಾಗರೂಕರಾಗಿರಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಮುಖಾಮುಖಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಇತ್ತ ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಇಲ್ಲೂ ಕೂಡ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯ ಸಿಂಚನ
ರಾಜಧಾನಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ತೇವಾಂಶಭರಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಸಾರ್ವಜನಿಕರಿಗೆ ಹವಾಮಾನ ಇಲಾಖೆಯ ಪ್ರಮುಖ ಸೂಚನೆಗಳು
- ಭಾರಿ ಮಳೆ ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಹಳೆಯ ಹಾಗೂ ದುರ್ಬಲ ಕಟ್ಟಡಗಳ ಕೆಳಗೆ ನಿಲ್ಲಬಾರದು.
- ವಿದ್ಯುತ್ ತಂತಿ ಹಾಗೂ ಕಂಬಗಳಿಂದ ಸೂಕ್ತ ದೂರ ಕಾಯ್ದುಕೊಂಡು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು.
- ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಸಂಚರಿಸುವ ವಾಹನ ಸವಾರರು ಅತಿ ಹೆಚ್ವು ಜಾಗ್ರತೆ ವಹಿಸಬೇಕು.
Protein Food: ಹೆಚ್ಚು ಪ್ರೋಟೀನ್ ತಿಂದರೆ ಕಿಡ್ನಿ ಹಾಳಾಗುತ್ತಾ?: ಈ ಆರೋಗ್ಯದ ಗೊಂದಲಕ್ಕೆ ತಜ್ಞರ ಉತ್ತರ ಇಲ್ಲಿದೆ!