newsics.com | ನ್ಯೂಸಿಕ್ಸ್
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 7 ರವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ. ಇನ್ನು ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಜುಲೈ 5 ರಿಂದ ಜುಲೈ 7 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಜಾಗರೂಕರಾಗಿರುವಂತೆ ಇಲಾಖೆ ವರದಿ ಮಾಡಿದೆ.
ಬೆಂಗಳೂರು ಮಹಾನಗರದಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಇನ್ನು ಮಡಿಕೇರಿಯಲ್ಲಿ ಗರಿಷ್ಠ 23 ಡಿಗ್ರಿ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ನಷ್ಟು ತಂಪಾದ ಹವಾಮಾನ ಇರಲಿದೆ. ರಾಜ್ಯದ ಕರಾವಳಿ ಭಾಗದ ಪ್ರಮುಖ ನಗರಗಳಾದ ಮಂಗಳೂರು ಮತ್ತು ಉಡುಪಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕಾರವಾರದಲ್ಲಿ 29 ಡಿಗ್ರಿ ಗರಿಷ್ಠ ಮತ್ತು 28 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಲಿದೆ.
ರಾಜ್ಯದ ಇತರ ನಗರಗಳ ಹವಾಮಾನ ವರದಿಯನ್ನು ಗಮನಿಸುವುದಾದರೆ, ಮೈಸೂರು, ಚಾಮರಾಜನಗರ, ಕೊಪ್ಪಳ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಮಂಡ್ಯದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದ್ದು, ಕನಿಷ್ಠ ತಾಪಮಾನ 21 ರಿಂದ 24 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ರಿಂದ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಹಾವೇರಿ ಮತ್ತು ಗದಗ ನಗರಗಳಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ರಿಂದ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹುಬ್ಬಳ್ಳಿಯಲ್ಲಿ 25-23 ಡಿಗ್ರಿ ಸೆಲ್ಸಿಯಸ್, ಬೆಳಗಾವಿ ಮತ್ತು ಹಾಸನದಲ್ಲಿ 24-22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇನ್ನುಳಿದಂತೆ ರಾಯಚೂರಿನಲ್ಲಿ 30-25 ಡಿಗ್ರಿ ಸೆಲ್ಸಿಯಸ್, ಯಾದಗಿರಿಯಲ್ಲಿ 29-25 ಡಿಗ್ರಿ ಸೆಲ್ಸಿಯಸ್, ಬಳ್ಳಾರಿಯಲ್ಲಿ 29-24 ಡಿಗ್ರಿ ಸೆಲ್ಸಿಯಸ್ ಹಾಗೂ ರಾಮನಗರದಲ್ಲಿ 28-23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಅತ್ಯಂತ ತಂಪಾದ ವಾತಾವರಣವಿರುವ ಚಿಕ್ಕಮಗಳೂರಿನಲ್ಲಿ ಗರಿಷ್ಠ 22 ಡಿಗ್ರಿ ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.