newsics.com | ನ್ಯೂಸಿಕ್ಸ್
ಇಟಾನಗರ್: ಅರುಣಾಚಲ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಲೋಹಿತ್ ಜಿಲ್ಲೆಯ ಶಿವಾಜಿ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಇಬ್ಬರು ವಲಸೆ ಕಾರ್ಮಿಕರು ಬಲಿಯಾಗಿದ್ದಾರೆ. ಬೆಟ್ಟದ ಇಳಿಜಾರು ಪ್ರದೇಶದಲ್ಲಿ ಮಣ್ಣು ಕುಸಿದು ಬಿದ್ದ ಪರಿಣಾಮ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇನ್ನು ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಆತಂಕ ಎದುರಾಗಿದೆ.
ದುರಂತಕ್ಕೆ ಈಡಾದವರೆಲ್ಲರೂ ಸ್ಥಳೀಯ ನಿರ್ಮಾಣ ಕಾಮಗಾರಿಯೊಂದರಲ್ಲಿ ತೊಡಗಿದ್ದ ವಲಸೆ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಭೂಕುಸಿತದ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಮತ್ತು ಅರುಣಾಚಲ ಪ್ರದೇಶ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದಾರೆ. ಅವಶೇಷಗಳ ಅಡಿಯಿಂದ ಈಗಾಗಲೇ ಇಬ್ಬರ ಶವಗಳನ್ನು ಹೊರತೆಗೆಯಲಾಗಿದ್ದು, ಮಣ್ಣಿನ ಅಡಿ ಸಿಲುಕಿರುವ ಉಳಿದವರಿಗಾಗಿ ಶೋಧ ಕಾರ್ಯ ಚುರುಕುಗೊಳಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಸುತ್ತಮುತ್ತಲಿನ ನಿವಾಸಿಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.
110 ಮೀಟರ್ ರಸ್ತೆ ಕುಸಿತ: ಹಳ್ಳಿಗಳ ಸಂಪರ್ಕ ಕಡಿತ
ಮತ್ತೊಂದೆಡೆ, ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಖೋನ್ಸಾ-ಲಾಜು ರಸ್ತೆಯ ಸುಮಾರು 110 ಮೀಟರ್ ಭಾಗ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಇದರಿಂದಾಗಿ ತಿರಪ್ ಜಿಲ್ಲೆಯ ಹತ್ತಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದ್ದು, ಸಾರಿಗೆ ಸಂಪೂರ್ಣ ಸ್ಥಗಿತಗೊಂಡಿದೆ.
ರಾಜ್ಯದ ಹಲವು ಭಾಗಗಳಲ್ಲಿ ಹಠಾತ್ ಪ್ರವಾಹ ಮತ್ತು ಭೂಕುಸಿತ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದ್ದು, ಗುಡುಗು ಸಹಿತ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
Crime Case ಚಾಕ್ಲೆಟ್ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿ ಮೇಲೆ ನಿರಂತರ ಅತ್ಯಾಚಾ*ರ