newsics.com| ನ್ಯೂಸಿಕ್ಸ್
ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಹೋರಾಟ ನಡೆಸುತ್ತಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ತನ್ನ ಪ್ರತಿಭಟನೆಯನ್ನು ಹಿಂಪಡೆದಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೋರಾಟಗಾರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಮ್ಮತಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಕೆಲವು ವಾರಗಳಿಂದ ಸಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದವು. ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದ ಯುವ ಹೋರಾಟಗಾರರ ತೀವ್ರ ಒತ್ತಡಕ್ಕೆ ಮಣಿದ ಧರ್ಮೇಂದ್ರ ಪ್ರಧಾನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ದೇಶದ ಯುವಜನತೆಯ ಹಿತದೃಷ್ಟಿಯಿಂದ ಹಾಗೂ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ರಾಜೀನಾಮೆ ನೀಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದ ಭರವಸೆ ಮತ್ತು ಪ್ರತಿಭಟನೆ ವಾಪಸ್
ಸಿಜೆಪಿ ಸಲ್ಲಿಸಿದ್ದ ಪ್ರಮುಖ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಪ್ರತಿಭಟನಾ ನಿರತರ ನಡುವೆ ಮಾತುಕತೆ ನಡೆಯಿತು. ಶಿಕ್ಷಣ ಸಚಿವರ ರಾಜೀನಾಮೆ ಜೊತೆಗೆ, ಪ್ರತಿಭಟನೆಯಲ್ಲಿದ್ದ ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಸರ್ಕಾರದ ಈ ನಿರ್ಧಾರದ ಬಳಿಕ ಸಿಜೆಪಿ ತನ್ನ ಪ್ರತಿಭಟನೆಯನ್ನು ಅಧಿಕೃತವಾಗಿ ಮುಕ್ತಾಯಗೊಳಿಸುವುದಾಗಿ ಘೋಷಿಸಿದೆ.
‘ವಿದ್ಯಾರ್ಥಿ ಶಕ್ತಿಗೆ ಸಿಕ್ಕ ಜಯ’
ಸಚಿವರ ರಾಜೀನಾಮೆ ಪ್ರಕಟವಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, “ಇದು ದೇಶದ ಯುವಜನತೆ ಮತ್ತು ಪ್ರಜಾಪ್ರಭುತ್ವಕ್ಕೆ ಸಿಕ್ಕ ಬೃಹತ್ ಜಯ. ಜಂಟಿ ಹೋರಾಟಕ್ಕೆ ಸರ್ಕಾರ ಮಣಿಯಲೇಬೇಕಾಯಿತು” ಎಂದು ಹೇಳಿದ್ದಾರೆ.
Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ