newsics.com/ನ್ಯೂಸಿಕ್ಸ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನ ಜೊತೆಗೆ ಕೆಲವೆಡೆ ಆಲಿಕಲ್ಲು ಮಳೆ ಅಂದಾಜಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಳಗಾವಿ, ಮೈಸೂರು, ಮಂಡ್ಯ, ರಾಯಚೂರು ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲೂ ಮುಂದಿನ ವಾರದಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವೆಡೆ ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಬರೋಬ್ಬರಿ 11 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.