newsics.com
ಬೆಂಗಳೂರು: ನಗರದ ವೈಯಾಲಿಕಾವಲ್‌ನಲ್ಲಿ ಮಹಿಳೆಯ ಭೀಕರ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಆರೋಪಿಯ ಗುರುತು ಸಿಕ್ಕಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
ಮಹಾಲಕ್ಷ್ಮಿ ಕೊಲೆ ಪ್ರಕರಣ ಸಂಬಂಧ ಇದೀಗ ಆರೋಪಿಯ ಗುರುತು ಪತ್ತೆಯಾಗಿದ್ದು, ಆರೋಪಿಯ ಶೋಧ ಮುಂದುವರಿದಿದೆ ಎಂದು ದಯಾನಂದ್ ಸುದ್ದಿಗಾರರಿಗೆ ಸೋಮವಾರ ತಿಳಿಸಿದ್ದಾರೆ.
ಆರೋಪಿ ಹೊರರಾಜ್ಯದವನಾಗಿದ್ದು, ಬೆಂಗಳೂರಿನಲ್ಲೇ ವಾಸವಾಗಿದ್ದ ಎಂದು ಮಾಹಿತಿ ನೀಡಿದ್ದಾರೆ.
ಈ ಮಾಹಿತಿ ಆಧರಿಸಿ ಮಹಾಲಕ್ಷ್ಮಿಯನ್ನು ನಿತ್ಯ ಪಿಕಪ್ ಹಾಗೂ ಡ್ರಾಪ್ ಮಾಡುತ್ತಿದ್ದ ಉತ್ತರಾಖಂಡ ಮೂಲದ ಆಪ್ತನೇ ಹಂತಕನಿರಬಹುದೆಂಬ ಶಂಕೆ ಮೇಲೆ ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಫ್ರೀಜರ್ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯ ಪತಿ ಹೇಮಂತ್ ಪತ್ನಿ ಸಾವಿಗೆ ಆಕೆ ಕೆಲಸ ಮಾಡುತ್ತಿದ್ದ ನಾಲ್ವರು ಸಹೋದ್ಯೋಗಿಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಆರೋಪಿಯ ಗುರುತು ಪತ್ತೆ ಹಚ್ಚಲಾಗಿದೆ.