newsics.com
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ನ.20ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ, ಮಹಾರಾಷ್ಟ್ರ ಚುನಾವಣೆ ಹಾಗೂ ಫಲಿತಾಂಶದ ದಿನಾಂಕ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. 26 ಜಿಲ್ಲೆಗಳ 288 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 4.97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ.
1,00,186 ಮತದಾನ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಮತದಾನ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸೌಕರ್ಯಗಳನ್ನು ನಿರ್ಮಿಸಲಾಗುವುದು. ಮತದಾನದ ಲೈನ್‌ನಲ್ಲಿ ಕುರ್ಚಿ ಮತ್ತು ಟೇಬಲ್ ಹಾಕಲು ಸೂಚಿಸಲಾಗಿದೆ. ಅಷ್ಟೇ ಅಲ್ಲ, ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದರೆ ನ.23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನ.13 ರಂದು ಉಪಚುನಾವಣೆ ನಡೆಯಲಿದೆ. ಉತ್ತರಾಖಂಡದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ ನ.20 ರಂದು ನಡೆಯಲಿದೆ. ಒಟ್ಟು 48 ವಿಧಾನಸಭೆ ಮತ್ತು 2 ಲೋಕಸಭಾ ಉಪಚುನಾವಣೆಯ ಫಲಿತಾಂಶ ನ.23 ರಂದು ಪ್ರಕಟವಾಗಲಿದೆ.