newsics.com
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆಯಲ್ಲಿ ಅ.21ರಂದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ನಗರ ಜಿಲ್ಲಾಧಿಕಾರಿ ತುರ್ತು ಮೌಖಿಕ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಅವರು ಮೌಖಿಕವಾಗಿ ಆದೇಶಿಸಿದ್ದಾರೆ.
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.