newsics.com
ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ.
ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧ ಹೇರಿದೆ.
ಇನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳಲ್ಲಿ ಪರೀಕ್ಷೆಯ ನಿಖರವಾದ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರವನ್ನು ಕೇಳಿದೆ. ಅಂದಹಾಗೆ ಈ ಕುರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಯಾವುದೇ ಜಿಲ್ಲೆಯಲ್ಲಿ ಪರೀಕ್ಷೆಯನ್ನು ನಡೆಸದಿದ್ದರೆ ಅದನ್ನು ಫಲಿತಾಂಶಕ್ಕೆ ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸಿದೆ.
ಏಕ ನ್ಯಾಯಾಧೀಶರ ಪೀಠದ ಮಾರ್ಚ್ 6 ರ ಆದೇಶವನ್ನು ತಳ್ಳಿಹಾಕಿ 2023-24ನೇ ಶೈಕ್ಷಣಿಕ ವರ್ಷಕ್ಕೆ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಹೈಕೋರ್ಟ್‌ನ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು. ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಮೂಲಕ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ನ ಏಕ ನ್ಯಾಯಾಧೀಶರು ರದ್ದುಗೊಳಿಸಿದ್ದಾರೆ.