newsics.com
ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಸೋಮವಾರ ತಮ್ಮ MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.
ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ, ‘ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜೀನಾಮೆ ಬಳಿಕ ಹೊರಟ್ಟ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚುನಾವಣೆಗೆ ಸ್ಪರ್ಧಿಸಬೇಕಾದರೆ, MLC ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಆದ್ದರಿಂದ ರಾಜೀನಾಮೆ ಕೊಟ್ಟಿದ್ದೇನೆ. ನಾನು ಯಾವುದೇ ಪಕ್ಷ ಸೇರುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರು. ಆದರೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ಬಿಟ್ಟುಕೊಡಲು ಒಪ್ಪುತ್ತಿಲ್ಲ. ಹೀಗಾಗಿ ಸಿಪಿವೈ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಚನ್ನಪಟ್ಟಣ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲದಲ್ಲಿದೆ. ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರಲು ತೆರೆಮರೆಯಲ್ಲಿ ಕಸರತ್ತು ನಡೆದಿವೆ ಎಂದೂ ಹೇಳಲಾಗುತ್ತಿದೆ.