newsics.com
ಬೆಳಗಾವಿ: ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ.
.ಹೌದು, ನೆರೆ ಮನೆಯವರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವೂ ಕೇಳಿ ಬಂದಿದೆ. ಸದ್ಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನೆಲೆ..?
ಬೆಳಗಾವಿಯ ವಡ್ಡರವಾಡಿಯ ಮನೆಯೊಂದರಲ್ಲಿ ಬಾಲಕಿಯೊಬ್ಬಳ ಜತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸವಾಗಿದ್ದಾರೆ. ಅಲ್ಲೇ ಪಕ್ಕದಲ್ಲಿ ವಾಸವಿರುವ ಮತ್ತೊಂದು ಕುಟುಂಬದವರು, ಮಹಿಳೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮನೆಗೆ ನುಗ್ಗಿ ತಾಯಿ, ಮಗಳನ್ನು ಹೊರಗೆ ಎಳೆದು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ.
ಬಿಎನ್ಎಸ್ ಕಾಯ್ದೆಯ ಸೆಕ್ಷನ್ 115(2), 3(5), 331, 352 ಹಾಗೂ 74 ರ ಅಡಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಘಟನೆ ಕಳೆದ ವರ್ಷ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.