newsics.com
ಬೆಂಗಳೂರು: ರಾಜ್ಯದ ಮೂರೂ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇನ್ನಷ್ಟು ಗಟ್ಟಿಯಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆಲ್ಲುವುದರೊಂದಿಗೆ ಡಿಕೆ ಸಹೋದರರು ಕ್ಷೇತ್ರದ ಮೇಲಿನ ತಮ್ಮ ಬಿಗಿಹಿಡಿತವನ್ನು ತೋರಿದ್ದಾರೆ. ಇದರಿಂದ ಜೆಡಿಎಸ್‌ಗೆ ತೀವ್ರ ಹಿನ್ನಡೆ ಉಂಟಾಗಿದೆ. ಈ ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್, ಜೆಡಿಎಸ್‌ನಲ್ಲಿ ಹೇಳಿಕೊಳ್ಳುವಂತಹ ಬದಲಾವಣೆಗೆ ಕಾರಣವಾಗುವ ಲಕ್ಷಣಗಳಿಲ್ಲ.
ಆದರೆ ಸೋಲಿನಿಂದ ಮಕಾಡೆ ಮಲಗಿ ತೀವ್ರ ಮುಖಭಂಗ ಅನುಭವಿಸಿರುವ ಬಿಜೆಪಿಯಲ್ಲಿ ಒಂದಷ್ಟು ಮಹತ್ವದ ಬದಲಾವಣೆಗಳಿಗೆ ಈ ಉಪಚುನಾವಣೆ ಫಲಿತಾಂಶ ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಕ್ಷ ಮುನ್ನಡೆಸುವಲ್ಲಿ ಸೋತಿದ್ದಾರೆ ಎಂಬ ಮಾತುಗಳಿಗೆ ಈಗ ಮತ್ತಷ್ಟು ಶಕ್ತಿ ಸಿಗಲಿದೆ. ಇದೇ ವೈಫಲ್ಯದ ಮಾತುಗಳು ವಿಜಯೇಂದ್ರ ಬದಲಾವಣೆಗೂ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ. ಹಿಂದುಳಿದ ವರ್ಗಕ್ಕೆ ಸೇರಿದ ಸಂಸದ ಗೋವಿಂದ ಕಾರಜೋಳ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದರೂ ಅಚ್ಚರಿ ಇಲ್ಲ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು 99,320 ಮತಗಳನ್ನ ಪಡೆದಿದ್ದಾರೆ. 25,193 ಸಿಪಿ ಯೋಗೇಶ್ವರ್ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ. 14,428 ಮತಗಳ ಅಂತರದಿಂದ ಫಠಾಣ್ ಗೆದ್ದಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನ್ನಪೂರ್ಣಾ ಇ. ತುಕಾರಾಂ ಅವರು 88, 727 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರು 79,622 ಮತಗಳನ್ನು ಪಡೆದುಕೊಂಡಿದ್ದಾರೆ. ಅನ್ನಪೂರ್ಣಾ ಅವರು 9105 ಮತಗಳ ಅಂತರದಿಂದ ಗೆಲವು ದಾಖಲಿಸಿದ್ದಾರೆ.