Newsics.com
ಬೆಂಗಳೂರು : ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ಸರಕಾರಿ ಶಾಲಾ-ಕಾಲೇಜು, ಸರಕಾರಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು. ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ಗಣಿ ಗುತ್ತಿಗೆ, ಸರಕಾರಿ ಶಾಲಾ, ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಯೋಜನೆ ಅನುಷ್ಠಾನಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26ರ ಸಂವಿಧಾನದ ದಿನಾಚರಣೆ ವೇಳೆ ರಾಜ್ಯದ ಎಲ್ಲ ಸರಕಾರಿ ಕಚೇರಿ, ಸರಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜು ಸೇರಿ ಸರಕಾರದ ವತಿಯಿಂದ ನಡೆಯುವ ಎಲ್ಲ ಸಮಾರಂಭಗಳಲ್ಲಿ ಮಹಾತ್ಮಗಾಂಧೀಜಿ ಭಾವಚಿತ್ರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿಡಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.
ಭಾರತ್ ಚಿನ್ನದ ಗಣಿ ಸಂಸ್ಥೆಯ, ಕೆಜಿಎಫ್ನಲ್ಲಿ ನಿಷ್ಕ್ರಿಯಗೊಂಡಿರುವ ಗಣಿಗುತ್ತಿಗೆಯ 1003.4 ಎಕರೆ ಪ್ರದೇಶದಲ್ಲಿ ಗಣಿ ಚಟುವಟಿಕೆಗಳನ್ನು ಮುಂದುವರೆಸಲು ಕೇಂದ್ರ ಸರಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಸಚಿವ ಸಂಪುಟ ಸಹಮತಿ ನೀಡಿದೆ. ಒಟ್ಟಾರೆ, 5213.21 ಹೆಕ್ಟೇರ್ ಪ್ರದೇಶದಲ್ಲಿ ಗಣಿ ಚಟುವಟಿಕೆಗಳು ನಡೆಯಲಿವೆ ಎಂದು ಅವರು ಹೇಳಿದರು.
2022-23ರ ವರೆಗೆ ಬಿಜಿಎಂಎಲ್ ರಾಜ್ಯಕ್ಕೆ 75.24ಕೋಟಿ ರೂ. ಬಾಕಿ ಮೊತ್ತವನ್ನು ಪಾವತಿಸಬೇಕಿದೆ. 2,330 ಎಕರೆ ಭೂಮಿಯಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲು ನೀಡಬೇಕೆನ್ನುವ ಬೇಡಿಕೆ ರಾಜ್ಯ ಸರಕಾರದ್ದು ಆಗಿದೆ. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.