newsics.com
ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಉಂಟಾದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
ಮೃತಪಟ್ಟವರ ಪೈಕಿ 10 ಮಹಿಳೆಯರು, ಮೂವರು ಸೇರಿ 15 ಜನ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರೇ ಹೆಚ್ಚಿದ್ದಾರೆ ಎಂದು ಸಿಸಿಎಂಒ ರೀತು ಸಕ್ಸೇನಾ ತಿಳಿಸಿದ್ದಾರೆ.
ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೆ ಹೋಗುವ ಎರಡು ವಿಶೇಷ ರೈಲುಗಳು ಆಗಮಿಸಲು ತಡವಾದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆಯಿಂದ ಉಂಟಾದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ.
ಹಠಾತ್ ನೂಕುನುಗ್ಗಲು ಉಂಟಾದ ಕಾರಣ ಜನ ಕಂಗಾಲಾದರು. ರೈಲ್ವೆ ನಿಲ್ದಾಣದ ಫ್ಲಾಟ್‌ಫಾರಂ 14 ಮತ್ತು 15ರಲ್ಲಿ ಶನಿವಾರ ರಾತ್ರಿ 9.55 ರ ಹೊತ್ತಿಗೆ ಈ ದುರಂತ ಸಂಭವಿಸಿದೆ ಎಂದು ವರದಿ ಹೇಳಿದೆ.
ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹತ್ತಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿ ಶಾಮಕ ದಳ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡುತ್ತಿದೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲುಗಳನ್ನು ಹತ್ತಲು ಪ್ರಯಾಣಿಕರು ಕಾಯುತ್ತಿದ್ದ ಸಂದರ್ಭದಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಜನಸಂದಣಿ ತೀವ್ರವಾಗಿದ್ದು ನೂಕುನುಗ್ಗಲು ಉಂಟಾಗಿದೆ.
ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾದಂತೆ ಪರಿಸ್ಥಿತಿ ನಿಭಾಯಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನಿಲ್ದಾಣಕ್ಕೆ ತೆರಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.