newsics.com
ಮಂಗಳೂರು: ಮಂಗಳೂರಿನ ಹೊರವಲಯದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳ ಮೂಲದ ಮುಸ್ಲಿಂ ಯುವಕ ಹತ್ಯೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಡಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಇನ್ಸ್ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವ ಜಿ. ಪರಮೇಶ್ವರ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.
ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರನ್ನು ಪೊಲೀಸರು ಬಂಧಿಸಿದ್ದಾರೆ.