ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.
CBIನಿಂದ ಪ್ರಕರಣದ ತನಿಖೆ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಬಿಜೆಪಿ ನಾಯಕರ ಅರ್ಜಿ ಮಾನ್ಯ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠ, ಈ ಹಗರಣದ SIT ತನಿಖೆ ರದ್ದು ಮಾಡಿ CBIಗೆ ಹಸ್ತಾಂತರಿಸಿ ಮಹತ್ವದ ತೀರ್ಪು ನೀಡಿದ್ದಾರೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸಿದೆ. ಅಷ್ಟೇ ಅಲ್ಲದೇ ಎಸ್‌ಐಟಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.