newsics.com
ನವದೆಹಲಿ: ಏಷ್ಯಾ ಕಪ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಭಾನುವಾರ (ಸೆಪ್ಟೆಂಬರ್ 14) ದುಬೈನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲಿನ ದಾಳಿ ಮತ್ತು ಈ ವರ್ಷದ ಆರಂಭದಲ್ಲಿ ನಡೆದ ಆಪರೇಷನ್ ಸಿಂಧೂರ್ ನಂತರ ಭಾರತವು ಏಷ್ಯಾ ಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಆಡುವ ಬಗ್ಗೆ ಹೆಚ್ಚಿನವರ ಒಲವು ಇಲ್ಲ. ಮೇ ತಿಂಗಳಲ್ಲಿ ಉಭಯ ದೇಶಗಳ ನಡುವೆ ಯುದ್ಧದಂತಹ ಪರಿಸ್ಥಿತಿ ಉಂಟಾಗಿ ಗಡಿ ಉದ್ವಿಗ್ನತೆ ಉತ್ತುಂಗಕ್ಕೇರಿತು.
ಏಷ್ಯಾ ಕಪ್ ಟಿ20 ಲೀಗ್‌ನ ಭಾಗವಾಗಿ ಸೆಪ್ಟೆಂಬರ್ 14, 2025 ರಂದು ದುಬೈನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸಲು ತಕ್ಷಣ ನಿರ್ದೇಶನಗಳನ್ನು ಕೋರಿ, ಉರ್ವಶಿ ಜೈನ್ ಸೇರಿದಂತೆ ನಾಲ್ವರು ಕಾನೂನು ವಿದ್ಯಾರ್ಥಿಗಳು ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಈ ಪಿಐಎಲ್ ಅನ್ನು ಸಲ್ಲಿಸಿದ್ದಾರೆ.