newsics.com
ಬೆಂಗಳೂರು: ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು. ಕಳೆದ ವರ್ಷ ಕೊರೋನಾ, ಬರಗಾಲ ಕಾರಣಕ್ಕೆ ಹೆಚ್ಚು ವಿಜೃಂಭಣೆ ಮಾಡಲಿಲ್ಲ. ಈ ಬಾರಿ ವಿಜೃಂಭಣೆ ಇರಲಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಸರಾ ಮಹೋತ್ಸವ ಸಂಬಂಧ (Mysore Dasaraಕಳೆದ 2024) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.
ಈ ಬಾರಿ ದಸರಾ ಅದ್ಧೂರಿತನಕ್ಕೆ ಯಾವುದೇ ಕೊರತೆ ಮಾಡುವುದು ಬೇಡ. ಈ ಬಾರಿ ಮೈಸೂರು ದಸರಾ ವಿಜೃಂಭಣೆಯಿಂದ ನಡೆಯಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಾರಿಯ ಮೈಸೂರು ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು. ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು ಎಂದು ಸಭೆಯಲ್ಲಿ ಸಿಎಂ ತಿಳಿಸಿದರು.
ವಿಜೃಂಭಣೆಯ ನಾಡಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತೇವೆ. ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ. ಗೋಲ್ಡ್ ಕಾರ್ಡ್‌ಗಳನ್ನು ಮುಂಚಿತವಾಗಿ ಮಾಡಿ. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ಕರ್ನಾಟಕ ಸಂಭ್ರಮ 50 ನವೆಂಬರ್‌ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.
ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಮಾಡುವುದಕ್ಕಿಂತ ಅಪ್‌ಗ್ರೇಡ್ (ಉನ್ನತೀಕರಿಸಿ) ಮಾಡಿ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿ ಸಭೆ ನಿರ್ಧರಿಸಿತು.