newsics.com
ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್ ಮೋಹನ್ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಮಂಗಳವಾರ ಎತ್ತಿಹಿಡಿದಿದೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಹೇಳಿದೆ.
ಪ್ರತಿವಾದಿ ಮೋಹನ್ ನಾಯಕ್ ವಿಚಾರಣೆ ಮುಂದುವರಿಯಲು ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸುತ್ತಿದ್ದಾರೆ. ಅವರು ಪ್ರಕರಣ ಮುಂದೂಡುವಂತೆ ಎಲ್ಲೂ ಕೋರಿಲ್ಲ. ಅಲ್ಲದೆ, ಅವರು 18-7-2018 ರಿಂದ ಬಂಧನದಲ್ಲಿದ್ದು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ತಾನು ಇಚ್ಛಿಸುವುದಿಲ್ಲ ಎಂದು ತನ್ನ ಆದೇಶದಲ್ಲಿ ಹೇಳಿದ ಸುಪ್ರೀಂ ಕೋರ್ಟ್ ವಿಶೇಷ ಅನುಮತಿ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿತು.
ವಿಚಾರಣೆಗೆ ಸಾಕಷ್ಟು ಸಮಯ ಹಿಡಿಯಬಹುದು ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2023ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಗೌರಿ ಅವರ ಸಹೋದರಿ ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಮಂಗಳವಾರ ನೀಡಿರುವ ಆದೇಶದಲ್ಲಿ ರಾಜ್ಯ ಸರ್ಕಾರದ ಮೇಲ್ಮನವಿಯನ್ನೂ ಸುಪ್ರೀಂ ವಜಾಗೊಳಿಸಿದೆ.