newsics.com/ನ್ಯೂಸಿಕ್ಸ್
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಆರಂಭವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಒಂದು ವಾರಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಪೂರ್ವ ಮಾರುತಗಳು ತೀವ್ರಗೊಂಡಿದ್ದು, ಇಂದಿನಿಂದ ಮುಂದಿನ ಒಂದು ವಾರ ಅಂದರೆ ಮೇ 28ರೆವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮುನ್ನಡೆಯಲು ಪೂರಕ ವಾತಾವರಣವಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಸಿಡಿಲಬ್ಬರದ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುಂಜಾಗೃತೆವಹಿಸುವಂತೆ ಸೂಚಿಸಲಾಗಿದೆ.
ಮೇ 23 ರಂದು ಬಾಗಲಕೋಟೆ, ಕೊಪ್ಪಳ, ವಿಜಯಪುರ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಮೇ 24 ರಂದು ತುಮಕೂರು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ. ಮೇ 25 ಮತ್ತು 26 ರಂದು ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದ್ದರೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಮಳೆ ಸಂಭವಿಸುವವಿದೆ. ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮೇ 27 ಮತ್ತು 28 ರಂದು ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಕಡೆ ಹಾಗೂ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Cockroach ಪಾರ್ಟಿಗೆ ಕೌಂಟರ್; ಕಾಫಿನಾಡಲ್ಲಿ ಲಕ್ಷ್ಮಣರೇಖೆ, ಹಿಟ್ ಪಕ್ಷದ ಅಬ್ಬರ